ಉಡುಪಿ: ಜಿಲ್ಲಾಧ್ಯಂತ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ದಿನಾಂಕ 15-07-2024ರ ಹವಾಮಾನ ಇಲಾಖೆ ರೆಡ್ ಅಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ನಾಳೆ ದಿನಾಂಕ 16-07-2024ರಂದು ಉಡುಪಿ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿರುತ್ತದೆ. ಉಳಿದಂತೆ ಎಲ್ಲಾ ಪದವಿ ಸ್ನಾತಕೋತ್ತರ ಪದವಿ ಡಿಪ್ಲೊಮಾ ಇಂಜಿನಿಯರಿಂಗ್ ಐಟಿಐ ಗಳಿಗೆ ರಜೆ ಘೋಷಿಸಿರುವುದಿಲ್ಲ ಕಾಲೇಜುಗಳಲ್ಲಿ ಪಾಠ ಪ್ರವಚನಗಳನ್ನು ನಡೆಸುವಾಗ ಈ ಕೆಳಕಂಡ ಅಂಶಗಳನ್ನು ಪರಿಗಣಿಸುವಂತೆ ಕಾಲೇಜುಗಳ ಮುಖ್ಯಸ್ಥರಿಗೆ ಹಾಗೂ ಸಂಬಂಧಪಟ್ಟವರಿಗೆ ಸಾಮಾನ್ಯ ಸೂಚನೆಯನ್ನು ನೀಡಲಾಗಿದೆ.
ವಿದ್ಯಾರ್ಥಿಗಳ ಹಾಜೂರಾತಿಯನ್ನು ಕಡ್ಡಾಯ ಪಡಿಸುವಂತಿಲ್ಲ. ಕಾಲೇಜು ಮುಖ್ಯಸ್ಥರು ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸುವಾಗ ಹಾಗೂ ಮನೆಗೆ ತೆರಳುವ ಸಂದರ್ಭದಲ್ಲಿ ಯಾವುದೇ ಅಪಾಯವಿಲ್ಲದೆ ಸುರಕ್ಷಿತವಾಗಿ ತಲುಪುವ ಬಗ್ಗೆ ಗಮನಹರಿಸುವುದು ಅಗತ್ಯ. ಅಲ್ಲದೆ ಕಠಿಣವಾದ ದಾರಿ ಎಂದರೆ ತೋಡು ಹಳ್ಳಗಳನ್ನು ದಾಟಿ ಬರುವ ಸಂದರ್ಭಗಳು ಇರುವಂತಹ ವಿದ್ಯಾರ್ಥಿಗಳಿಗೆ ಮನೆಯಲ್ಲಿ ಸುರಕ್ಷಿತವಾಗಿ ಇರುವಂತೆ ಸೂಚಿಸಲು ತಿಳಿಸಿದೆ. ದುರ್ಬಲ ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ ಈ ನಿಟ್ಟಿನಲ್ಲಿ ಕಾಲೇಜುಗಳ ಮುಖ್ಯಸ್ಥರು ಗಮನಹರಿಸುವುದು ಹಾಗೂ ಯಾವುದೇ ಅವಘಡಗಳು ಉಂಟಾಗದಂತೆ ಸೂಕ್ತ ಕ್ರಮ ವಹಿಸುವುದು ಈ ಮಳೆಯಿಂದಾಗಿ ಮುಂಜಾಗ್ರತಾ ಕ್ರಮವಾಗಿ ರಜೆಯನ್ನು ನೀಡಿ ಉಂಟಾಗಿರುವ ಕಲಿಕಾ ಸಮಯದ ಕೊರತೆಯನ್ನು ಶನಿವಾರ ಮಧ್ಯಾಹ್ನ ಅಥವಾ ಭಾನುವಾರಗಳಂದು ಹೆಚ್ಚುವರಿ ತರಗತಿಯನ್ನು ನಡೆಸಿ ನಷ್ಟವನ್ನು ಸರಿಪಡಿಸುವಂತೆ ತಿಳಿಸಿದೆ. ವಿದ್ಯಾರ್ಥಿಗಳ ಪೋಷಕರು ಕಾಲೇಜುಗಳಿಗೆ ಹೋಗುವ ವಾಹನಗಳ ಸುರಕ್ಷತೆಯನ್ನು ನೋಡಿಕೊಳ್ಳುವುದು ಮತ್ತು ಕಾಲೇಜುಗಳಲ್ಲಿ ಪ್ರಾಕೃತಿಕ ವಿಕೋಪ ನಿಭಾಯಿಸುವ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡುವುದು. ಸಾರ್ವಜನಿಕರು ಪ್ರಾಕೃತಿಕ ವಿಕೋಪ ಸಂಭವಿಸಿದ ಯಾವುದೇ ಸಮಯದಲ್ಲಿ ಈ ಕೆಳಕಂಡ ದೂರವಾಣಿಯನ್ನು ಸಂಪರ್ಕಿಸಬಹುದು ತುರ್ತು ಸೇವೆ ಟೋಲ್ ಫ್ರೀ ಸಂಖ್ಯೆ 24*7 ಕಂಟ್ರೋಲ್ ರೂಂ -1077/0820-257480 ಗೆ ಸಂಪರ್ಕಿಸಿ ಎಂದು ಜಿಲ್ಲಾಧಿಕಾರಿಗಳಾದ ಡಾ. ಕೆ.ವಿದ್ಯಾ ಕುಮಾರಿ ಇವರು ತಿಳಿಸಿದ್ದಾರೆ.
-ಆರತಿ ಗಿಳಿಯಾರು.