December 23, 2024

ಬೆಂಗಳೂರು: ಸ್ವಾತಂತ್ರ್ಯ ಬಂದಾಗಿನಿಂದ ದೇಶದ ಆಡಳಿತದ ಚುಕ್ಕಾಣಿ ಹಿಡಿದ ಕಾಂಗ್ರೆಸ್ ಪಕ್ಷವು ಹಲವಾರು ಬಾರಿ ಸಂವಿಧಾನಕ್ಕೆ ತಿದ್ದುಪಡಿ ಮಾಡಿದೆ. ಅಲ್ಲದೆ, ಸಂವಿಧಾನದ ದುರುಪಯೋಗ ಪಡಿಸಿಕೊಂಡು ದೇಶದಲ್ಲಿ ತುರ್ತು ಪರಿಸ್ಥಿತಿ ಏರುವ ಹೇಯ ಕೃತ್ಯ ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಆಗಿದೆ ಎಂಬುದನ್ನು ದೇಶ- ರಾಜ್ಯದ ಜನರು ಮರೆತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಶಾಸಕರಾದ ಬಿ.ವೈ.ವಿಜಯೇಂದ್ರ ಹೇಳಿದರು.
ಸಂವಿಧಾನ ದಿನಾಚರಣೆಯ ಪ್ರಯುಕ್ತ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು “ಸಂವಿಧಾನ ಸನ್ಮಾನ” ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಹಿಂದೆ ಕಾನೂನು ದಿನವನ್ನಾಗಿ ಇದನ್ನು ಆಚರಿಸಲಾಗುತ್ತಿತ್ತು. ಇದನ್ನು ಸಂವಿಧಾನ ಸಮರ್ಪಣಾ ದಿನವಾಗಿ ಅರ್ಥಪೂರ್ಣವಾಗಿ ಆಚರಿಸುವ ಅಭಿಲಾಷೆ ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಜೀ ಅವರದು. ನ.26ರಿಂದ ಜನವರಿ 26ರವರೆಗೆ 2 ತಿಂಗಳುಗಳ ಕಾಲ ದೇಶಾದ್ಯಂತ ಸಂವಿಧಾನ ಸನ್ಮಾನ ಅಭಿಯಾನ ಆಚರಿಸಲಾಗುತ್ತಿದೆ. ಸಂವಿಧಾನ ಒಂದು ಧರ್ಮಗ್ರಂಥ. ಸಂವಿಧಾನಕ್ಕೆ ಅವಹೇಳನ ಮಾಡಿದ ಕಾಂಗ್ರೆಸ್ಸಿಗರು ಸಂವಿಧಾನದ ರಕ್ಷಕರು, ಸಂವಿಧಾನ ಪ್ರತಿಪಾದಕರಂತೆ ಕಪಟ ನಾಟಕವನ್ನು ಹಲವಾರು ದಶಕಗಳಿಂದ ನಿರಂತರವಾಗಿ ಮಾಡುತ್ತಾ ಬಂದಿದ್ದಾರೆ ಎಂದು ಟೀಕಿಸಿದರು.

ಕಾಂಗ್ರೆಸ್ ಪಕ್ಷದವರು ಸಂವಿಧಾನಕ್ಕೆ ಧಕ್ಕೆ ತರುವ ನಿಟ್ಟಿನಲ್ಲಿ ಕೆಲಸ ಮಾಡಿದ್ದಾರೆ. ಆದರೆ, ಸಂವಿಧಾನಕ್ಕೆ ಗೌರವ ತರುವ ನಿಟ್ಟಿನಲ್ಲಿ, ಸಂವಿಧಾನವನ್ನು ಈ ದೇಶದ ಪ್ರತಿಯೊಬ್ಬ ಪ್ರಜೆಯೂ ಕೂಡ ಗೌರವದಿಂದ ಕಾಣುವ ಮತ್ತು ಪಾಲಿಸುವ ಕಡೆ ಬಿಜೆಪಿ ಮುಂದಾಗಿದೆ. ಈ ಆಚರಣೆಯು ಕೇವಲ ನವೆಂಬರ್ 26ಕ್ಕೆ ಸೀಮಿತ ಆಗಬಾರದು‌.
ಕಾಂಗ್ರೆಸ್ ಪಕ್ಷದವರು ಇತಿಹಾಸವನ್ನು ಮರೆಮಾಚಿಸುವ ಕೆಲಸವನ್ನು ನಿರಂತರವಾಗಿ ಮಾಡುತ್ತಾ ಬಂದಿದ್ದಾರೆ. ಅದನ್ನು ತೊಡೆದು ಹಾಕಿ, ಡಾ.ಬಾಬಾಸಾಹೇಬ ಅಂಬೇಡ್ಕರರ ನೇತೃತ್ವದಲ್ಲಿ ರಚಿಸಿದ ಸಂವಿಧಾನಕ್ಕೆ ಸಂಪೂರ್ಣ ಗೌರವ ತಂದು ಕೊಡುವ ಪ್ರಾಮಾಣಿಕ ಕೆಲಸವನ್ನು ಈ ದೇಶದ ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಾಡಿದ್ದಾರೆ‌ ಎಂದು ಹೇಳಿದರು.

ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಬಸವರಾಜ ಬೊಮ್ಮಾಯಿ ಮಾತನಾಡಿ ಸ್ವಾತಂತ್ರ್ಯ ನಂತರದಲ್ಲಿ ಸಂವಿಧಾನ ರಚನೆ ದೊಡ್ಡ ಸವಾಲಾಗಿತ್ತು. ಆಗ ಸಂವಿಧಾನ ಸಮಿತಿಯು ಸುದೀರ್ಘ- ಎಲ್ಲಾ ಆಯಾಮಗಳಲ್ಲಿ ಚರ್ಚೆ ಮಾಡಿ ಬಾಬಾಸಾಹೇಬ ಅಂಬೇಡ್ಕರರ ಮಾನವೀಯ ತತ್ವಗಳನ್ನು ಸೇರಿಸಿದ್ದರಿಂದ ನಮ್ಮ ಸಂವಿಧಾನವು ವಿಶ್ವದಲ್ಲೇ ಅತ್ಯಂತ ಶ್ರೇಷ್ಠ ಸಂವಿಧಾನ ಎನಿಸಿದೆ ಎಂದರು.

ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮಾತನಾಡಿ ಸರ್ವರಿಗೂ ಸಮಾನ ಅವಕಾಶ ನೀಡುವ ಸಂವಿಧಾನವನ್ನು ಡಾ.ಅಂಬೇಡ್ಕರ್ ರವರು ನೀಡಿದ್ದು, ಅದು ಸಾರ್ವಕಾಲಿಕ‌, ಸದಾ ಪ್ರಸ್ತುತ. ಸಂವಿಧಾನದ ಕುರಿತು ಅಪಸ್ವರ ಬರಬಾರದು ಎಂದು ಹೇಳಿದರು.

ಈ ಸಂದರ್ಭದಲ್ಲಿ
ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್, ಪ್ರಕೋಷ್ಠಗಳ ರಾಜ್ಯ ಸಂಯೋಜಕ ಎಸ್.ದತ್ತಾತ್ರಿ
ವಿಧಾನಪರಿಷತ್ತಿನ ಸದಸ್ಯರಾದ ಎನ್.ರವಿಕುಮಾರ್, ಬಿ.ಜಿ.ಪಾಟೀಲ್, ವಿಧಾನಪರಿಷತ್ತಿನ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಶಾಸಕ ಬಸವರಾಜ ಮತ್ತಿಮೊಡ, ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷರಾದ ಕು.ಮಂಜುಳಾ, ಬಿಜೆಪಿ ರಾಜ್ಯ ಕಾರ್ಯದರ್ಶಿ ಲಲಿತಾ ಆನಾಪುರ, ಮುಖಂಡ ಜಗದೀಶ್ ಹಿರೇಮನಿ, ರಾಜ್ಯ ಎಸ್‍ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕಾರಜೋಳ ಮತ್ತು ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.


Leave a Reply

Your email address will not be published. Required fields are marked *